Homeಕರ್ನಾಟಕಸೆ.28ಕ್ಕೆ ಪಿಎಸ್ಐ ಪರೀಕ್ಷೆ, ಆಕಾಂಕ್ಷಿಗಳ ಮನವಿಗೆ ಸರ್ಕಾರ ಸ್ಪಂದನೆ

ಸೆ.28ಕ್ಕೆ ಪಿಎಸ್ಐ ಪರೀಕ್ಷೆ, ಆಕಾಂಕ್ಷಿಗಳ ಮನವಿಗೆ ಸರ್ಕಾರ ಸ್ಪಂದನೆ

ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು” ಎಂದರು.

“ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಅಭ್ಯರ್ಥಿಗಳ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ವಿವರಿಸಿದರು.

“ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದರು.

“ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments