ಹುಬ್ಬಳ್ಳಿ, ಬೆಂಗಳೂರು, ಮೈಸೂರು ಕೇಂದ್ರಗಳಲ್ಲಿ ರೈಲ್ವೆ ಪದನ್ನೋತಿ ಪರೀಕ್ಷೆ ರದ್ದು, ಕರವೇ ಹೋರಾಟಕ್ಕೆ ಜಯ
ಇಂದಿನಿಂದ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಕೇಂದ್ರಗಳಲ್ಲಿ ಆರಂಭವಾಗಿದ್ದ ರೈಲ್ವೆ ಪದನ್ನೋತಿ ಪರೀಕ್ಷೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆಯ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ.
ಸ್ವತಃ ರೈಲ್ವೆ ಪರೀಕ್ಷಾ ಹಾಗೂ ನೇಮಕಾತಿ (ಆರ್ ಆರ್ ಸಿ ) ಮುಖ್ಯಸ್ಥ ಆಸಿಫ್ ಅನ್ಸಾರಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರಿಗೆ ದೂರವಾಣಿ ಕರೆ ಮಾಡಿ ಪರೀಕ್ಷೆ ರದ್ದುಪಡಿಸಿರುವ ವಿಷಯವನ್ನು ಖಚಿತಪಡಿಸಿದ್ದಾರೆ.
ಈ ಕುರಿತು ಕರವೇ ಕಚೇರಿಯಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮತ್ತೆ ಏನಾದರೂ ಕನ್ನಡವಿಲ್ಲದೆ ಪರೀಕ್ಷೆಗಳನ್ನು ನಡೆಸಲು ಮುಂದಾದರೆ ಇಡೀ ರಾಜ್ಯದಾದ್ಯಂತ ರೈಲ್ವೆ ವ್ಯವಸ್ಥೆಯನ್ನೇ ಬಂದ್ ಮಾಡಬೇಕಾಗಿ ಬರುತ್ತದೆ. ನಾವು ಯಾವುದೇ ಸ್ವರೂಪದ ಚಳವಳಿಗೂ ಸಿದ್ಧ ಎಂದು ಎಚ್ಚರಿಸಿದರು.
ಶನಿವಾರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ದೆಹಲಿ ನಿವಾಸದಲ್ಲಿ ಅವರ ಸಮ್ಮುಖದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಕನ್ನಡಿಗರ ಆಗ್ರಹವನ್ನು ಮಂಡಿಸಲಾಗುವುದು ಎಂದು ತಿಳಿಸಿದ ಅವರು, ಕರ್ನಾಟಕದಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶವಿಲ್ಲದ ಯಾವುದೇ ಪರೀಕ್ಷೆಗಳನ್ನು ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
*ಹುಬ್ಬಳ್ಳಿಯಲ್ಲಿ ಪ್ರತಿಭಟನೆ*
ಇಂದು ಬೆಳಿಗ್ಗೆ 8 ಗಂಟೆಯಿಂದಲ ಹುಬ್ಬಳ್ಳಿಯ ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಮುಂದೆ ನೆರೆದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪರೀಕ್ಷೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿದರು. ತಂಡತಂಡವಾಗಿ ಪರೀಕ್ಷಾ ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಪರೀಕ್ಷಾ ಕೇಂದ್ರಗಳಿಗೆ ನುಗ್ಗಲು ಮುಂದಾದರು.
ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಕರವೇ ಮುಖಂಡರೊಂದಿಗೆ ಮಾತುಕತೆ ನಡೆಸಿದ ರೈಲ್ವೆ ಅಧಿಕಾರಿಗಳು ಪರೀಕ್ಷೆಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದರು. ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗಳನ್ನು ಹೊರಗೆ ಕಳುಹಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳ ನೂರಾರು ಕಾರ್ಯಕರ್ತರು, ಮುಖಂಡರು ತಂಡೋಪತಂಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಗೊಂಡಿತ್ತು. ಕರವೇ ಜಿಲ್ಲಾಧ್ಯಕ್ಷರುಗಳು, ರಾಜ್ಯ ಪದಾಧಿಕಾರಿಗಳ ಸಾಮೂಹಿಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನಲ್ಲಿ:
ರೈಲ್ವೆ ಇಲಾಖೆ ಪದೋನ್ನತಿ ಪರೀಕ್ಷೆಗಳು ನಡೆಯುತ್ತಿದ್ದ ಮೈಸೂರಿನ ಪರೀಕ್ಷಾ ಕೇಂದ್ರದ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ಮೈಸೂರು ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಚಳವಳಿಗಾರರು ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಬಂಧಿಸಿ ಕರೆದೊಯ್ದರು.
ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಹಿನ್ನೆಲೆಯಲ್ಲಿ ಹಿಂದೆಂದೂ ಕಾಣದ ಪೊಲೀಸ್ ಭದ್ರಕೋಟೆಯನ್ನೇ ನಿರ್ಮಿಸಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಮತ್ತು ರೈಲ್ವೆ ವಿಭಾಗೀಯ ಕಚೇರಿಗೆ ಅಭೂತಪೂರ್ವ ರಕ್ಷಣೆಯನ್ನು ಒದಗಿಸಲಾಗಿತ್ತು. ನಿನ್ನೆಯೇ ಕಾಟನ್ ಪೇಟೆ ಪೊಲೀಸರು ರೈಲು ನಿಲ್ದಾಣದ ಬಳಿ ಯಾವುದೇ ಪ್ರತಿಭಟನೆ ನಡೆಸದಂತೆ ನೋಟಿಸ್ ನೀಡಿದ್ದರು.
ಆದರೆ ಪೊಲೀಸರ ನೋಟೀಸಿಗೆ ಬೆದರದ ಕರವೇ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದರು. ಬೇರೆ ಬೇರೆ ತಂಡಗಳಾಗಿ ಬಂದ ಕಾರ್ಯಕರ್ತರು ಪೊಲೀಸರ ಭದ್ರಕೋಟೆ ಭೇದಿಸಿ ಪ್ರತಿಭಟನೆ ದಾಖಲಿಸಿದರು.
ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಬೆಂಗಳೂರು ನಗರ ಅಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಕರವೇ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಸಹನಾ ಶೇಖರ್ ನೇತೃತ್ವದಲ್ಲಿ ನೂರಾರು ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.


