ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸುವಂತೆ ಮನವಿ ಸಲ್ಲಿಸಿತು.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ ಹಾಕಿ, ಒಕ್ಕಲಿಗ ಸಮುದಾಯ ಉದ್ದೇಶಿಸಿ ಪತ್ನಿಗೆ ಅಶ್ಲೀಲ ಪದಗಳನ್ನು ಬಳಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.
ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದುಕೊಂಡಿದ್ದರು. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದು, ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.
ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ.