ಕೊಳಗೇರಿ ಅಭಿವೃದ್ಧಿ ಮಂಡಳಿ ಎಂಜಿನಿಯರ್ ಆಗಿದ್ದ ಎನ್.ಪಿ.ಬಾಲರಾಜು ಅವರು ನಿವೃತ್ತಿಯಾಗಿ ಒಂದೇ ದಿನದಲ್ಲಿ ಅದೇ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಮಹತ್ವದ ಹುದ್ದೆ ಪಡೆದುಕೊಂಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಆಗಸ್ಟ್ 31ರಂದು ನಿವೃತ್ತಿಯಾಗಿದ್ದ ಎನ್.ಪಿ. ಬಾಲರಾಜು ಅವರನ್ನು ಸೆಪ್ಟೆಂಬರ್ 1ರಿಂದ ಮಂಡಳಿಯ ಮುಖ್ಯ ತಾಂತ್ರಿಕ ಸಲಹೆಗಾರರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿ ಕಾರಿ ಹಾಗೂ ನೌಕರರ ನೇಮಕಾತಿ ಸರ್ಕಾರಕ್ಕೆ ಹೊರೆ ಆಗಿರುವುದನ್ನು ಮನಗಂಡು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಜೂನ್ 14ರಂದು ನಿವೃತ್ತ ಗುತ್ತಿಗೆ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆ ಗೊಳಿಸುವಂತೆ ಆದೇಶ ಹೊರಡಿಸಿದ್ದರು.
ನಿಗಮ, ಮಂಡಳಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದ ಸಿಎಂ ಸಿದ್ದರಾಮಯ್ಯ ಅವರೇ ಇದೀಗ ನಿವೃತ್ತ ಅಧಿಕಾರಿಯ ನೇಮಕಕ್ಕೆ ಆದೇಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಅವರು ಕಳೆದ ಜೂನ್‌ನಲ್ಲಿ ನಿವೃತ್ತ ಹಿರಿಯ ಅಧಿಕಾರಿಗಳನ್ನು ವಜಾ ಮಾಡಲು ಆದೇಶ ನೀಡಿದ್ದರು. ಈ ಆದೇಶದ ಬಳಿಕ 360ಕ್ಕೂ ಹೆಚ್ಚು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು, ನಿವೃತ್ತ ಎಂಜಿನಿಯರ್‌ಗಳು, ಲೆಕ್ಕಾಧಿಕಾರಿಗಳು ಸೇರಿ ಅನೇಕ ಹುದ್ದೆಯಲ್ಲಿನ ಅಧಿಕಾರಿ, ಸಿಬ್ಬಂದಿಯನ್ನು ಸರ್ಕಾರ ವಜಾ ಮಾಡಿತ್ತು.
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಮುಖ್ಯ ಎಂಜಿನಿಯರ್ ಎನ್.ಪಿ. ಬಾಲರಾಜು ಅವರನ್ನು ನಿವೃತ್ತಿ ಬಳಿಕ ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಅದೇ ಹುದ್ದೆಯಲ್ಲಿ ಮುಂದುವರಿಸಲು ಕಡತ ಮಂಡಿಸುವಂತೆ ವಸತಿ ಸಚಿವರ ಕಚೇರಿಯಿಂದ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮತ್ತೆ ಪತ್ರ ಬರೆಯಲಾಗಿತ್ತು.
ಬಾಲರಾಜು ಈಗ ಕೊಳೆಗೇರಿ ಅಭಿವೃದ್ಧಿ ಮಂಡಳಿ ಮುಖ್ಯ ಎಂಜಿನಿಯರ್ ಹುದ್ದೆಯ ಜತೆಗೆ ರಾಜೀವ್ ಗಾಂಧಿ ವಸತಿ ನಿಗಮದ ಮುಖ್ಯ ಎಂಜಿನಿಯರ್ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಹೊಂದಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮ ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆಗಳ ನಿರ್ಮಾಣ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನೂ ಹೊತ್ತಿದೆ.