ವರ್ಷಾಂತ್ಯದೊಳಗೆ ಪಂಚಾಯತಿ ಚುನಾವಣೆ ನಡೆಸಲು ಈಶ್ವರ ಖಂಡ್ರೆ ಸಭೆ
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮಪಂಚಾಯತಿಗಳಿಗೆ ಬರಬೇಕಾದ 2186.20 ಕೋಟಿ ರೂ. ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಸಚಿವ ಈಶ್ವರ ಬಿ ಖಂಡ್ರೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಈ ರೀತಿ ಅನ್ಯಾಯ ಎಸಗುತ್ತಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಕುರಿತು ಚರ್ಚೆ ನಡೆಸಿದ್ದಾರೆ.
ಗ್ರಾಮಪಂಚಾಯತಿ ಚುನಾವಣೆಗೆ ಸಿದ್ಧತೆ:
ರಾಜ್ಯ ಸರ್ಕಾರ ಅವಧಿ ಮುಗಿದ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಸ್.ಐ.ಆರ್.ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿ ನಿಯೋಜನೆ ಆಗಿದ್ದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಗ್ರಾ.ಪಂ. ಚುನಾವಣೆಗೆ ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಶೀಘ್ರವೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಪಂಚಾಯತಿ ರಾಜ್ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್ ಅವರೊಂದಿಗೆ ಚುನಾವಣೆ ನಡೆಸುವ ಕುರಿತು ಕಾನೂನು ಅಂಶಗಳ ಬಗ್ಗೆ ಮಾಹಿತಿ ಪಡೆದರು.


