ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ (ಗೊ.ರು.ಚ) ಅವರು ಆಯ್ಕೆಯಾಗಿದ್ದಾರೆ.
ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ.
ಗೊ ರು ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993), ಮಂಡ್ಯ (1994) ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.
ಸಂಘಟಕರಾಗಿದ್ದ ಗೊ.ರು. ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ 18.05.1930ರಂದು ಜನಿಸಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜತೆಗೆ ವಿವಿಧ ಸಂಘಸಂಸ್ಥೆಗಳಿಗಾಗಿ ದುಡಿದರು.
ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಗೊ.ರು.ಚ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳಿಗೆ ಹೆಡ್‍ಕ್ವಾಟರ್ಸ್ ಕಮೀಷನರ್ ಆಗಿ ದುಡಿದಿರುವ ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.
ಪತ್ರಿಕಾವೃತ್ತಿ ಬಲ್ಲ ಇವರು ‘ಜಾನಪದ ಜಗತ್ತು’, `ಪಂಚಾಯತ್ ರಾಜ್ಯ’, `ಕನ್ನಡ ಸಾಹಿತ್ಯ ಪರಿಷತ್ ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.