ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಆಯಕ್ತರಾಗಿದ್ದ ಬಿ.ದಯಾನಂದ್ ಅಮಾನತುಗೊಂಡ ಬೆನ್ನಲ್ಲೇ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ರಾತ್ರಿಯೇ ಆದೇಶ ಹೊರಡಿಸಿದೆ.
ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೀಮಂತ್ ಕುಮಾರ್ ಸಿಂಗ್ ನಗರದ 39ನೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬಿಹಾರದ ರಾಂಚಿ ಮೂಲದ ಸೀಮಂತ್ ಕುಮಾರ್ ಸಿಂಗ್ 1970ರಲ್ಲಿ ಜನಿಸಿದ್ದು, 1996ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ, ಕೇಂದ್ರ ವಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬಳಿಕ ಎಸಿಬಿ, ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೀಮಂತ್ ಕುಮಾರ್ ಸಿಂಗ್‌ರನ್ನು ಕೆಲ ತಿಂಗಳ ಹಿಂದಷ್ಟೇ ಬಿಎಂಟಿಎಫ್ ಎಡಿಜಿಪಿಯನ್ನಾಗಿ ನೇಮಿಸಲಾಗಿತ್ತು. ಇದೀಗ ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.


