ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿ, ರಾಜ್ಯದಾದ್ಯಂತ ದೊಡ್ಡ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಇಂದು (ಸೆ.19) ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡುವ ಜೊತೆಗೆ ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಮೂರು ಸಲ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು.
ಡಿ. ಕೆಂಪಣ್ಣ ಅವರು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಬಿಜೆಪಿ ವಿರುದ್ಧ‘ಪೇ ಸಿಎಂ’ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತ್ತು. ಕಾಂಗ್ರೆಸ್ ಗೆಲುವಿಗೆ ಕೆಂಪಣ್ಣ ಅವರ ಹೋರಾಟ ಕೂಡ ಪರೋಕ್ಷವಾಗಿ ವರವಾಗಿತ್ತು.