ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ.
ಸರ್ಕಾರದ ನೀತಿಯಂತೆ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದಲ್ಲಿ ಸಂಭ್ರಮದಿಂದ ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಬೇಕು.
ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗೆ 1 ಲಕ್ಷ ರೂ. ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಪ್ರತಿ ತಾಲ್ಲೂಕಿಗೆ 20 ಸಾವಿರದಂತೆ ಅನುದಾನವನ್ನು ಬಿಡುಗಡೆ ಆದೇಶ ಹೊರಡಿಸಿದೆ.
ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಬೆಂಗಳೂರು ನಗರದಲ್ಲಿ ಏರ್ಪಡಿಸುವ ನಿಮಿತ್ತ ಬೆಂಗಳೂರು ನಗರ ಜಿಲ್ಲೆಗೆ 50 ಲಕ್ಷ ರೂ.ಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರಿಗೆ ಬಿಡುಗಡೆ ಮಾಡಲಾಗಿದೆ.
ಮುಂದುವರೆದು, 30 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಲಾ 1 ಲಕ್ಷ ರೂ.ಗಳಂತೆ ಒಟ್ಟು 30 ಲಕ್ಷ ರೂ. ಮೊತ್ತವನ್ನು ಹಾಗೂ 31 ಜಿಲ್ಲೆಗಳಲ್ಲಿನ 232 ತಾಲ್ಲೂಕುಗಳಲ್ಲಿ, ಪ್ರತಿ ತಾಲ್ಲೂಕಿಗೆ 20 ಸಾವಿರ ರೂ. ದಂತೆ ಒಟ್ಟು 46,40,000 ರೂ. ಮೊತ್ತವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.