ಹತ್ಯೆಗೀಡಾದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಬೆಂಗಳೂರಿನಲ್ಲಿ ಮಾ.19ರ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ. ಹತ್ಯೆಗೀಡಾದ ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಮಾಧ್ಯಮಗಳಿಗೆ ಹೇಳಿದ್ದಾರೆ.
ರಾಣೆಬೆನ್ನೂರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಬ್ಯಾಡಗಿ ಅವರು ಮಾರ್ಚ್ 2ರಂದು ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ನಾಪತ್ತೆ ದೂರು ದಾಖಲು ಮಾಡಿದ್ದರು. ಮಾರ್ಚ್ 6ರಂದು ರಾಣೆಬೆನ್ನೂರು ತಾಲೂಕಿನ ಪತ್ಯಾಪುರ ಬಳಿ ತುಂಗಭದ್ರಾ ನದಿ ದಡದಲ್ಲಿ ಶವ ಪತ್ತೆಯಾಗಿತ್ತು.