ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ” ಎಂದು ಹೇಳಿದರು.
“ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ” ಎಂದರು.
“ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ. ಅಭ್ಯರ್ಥಿಗಳ ನಾಮನಿರ್ದೇಶನವು ಜಾತಿ ಲೆಕ್ಕಾಚಾರಗಳನ್ನು ಆಧರಿಸಿರುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು” ಎಂದು ಹೇಳಿದರು.