ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಡೆಡ್ಲೈನ್ ಇಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.
ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದರು.
“ನಕಲಿ ನೋಂದಣಿ ಪ್ರಕರಣಗಳನ್ನು ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದರು.
ಮನೆಯಿಂದಲೇ ಪಡೆಯಬಹುದು ಇ-ಖಾತಾ
“ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು” ಎಂದು ಅವರು ತಿಳಿಸಿದರು.
“ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು” ಎಂದು ಅವರು ತಿಳಿಸಿದರು.
ಮಧ್ಯವರ್ತಿಗಳ ಹಾವಳಿ-ನಕಲಿ ನೋಂದಣಿಗೆ ಶಾಶ್ವತ ಪರಿಹಾರ
ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ನಕಲಿ ನೋಂದಣಿಗಳನ್ನು ತಪ್ಪಿಸಿ, ಆಸ್ತಿ ಮಾಲೀಕರ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ ಎಂದರು.
ಮುಂದುವರೆದು, “ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿರುವುದು ನಿಜ. ಆದರೆ, ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಲ್ಲದೆ ಬದುಕಬಹುದು. ಸಾರ್ವಜನಿಕರ ಅನುಕೂಲಕ್ಕಾಗಿಯೇ ಹಲವು ಸವಾಲುಗಳ ನಡುವೆಯೂ ಈ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದು ನಕಲಿ ನೋಂದಣಿಗಳನ್ನು ತಡೆಯುವುದಕ್ಕೂ ಇದು ಸಹಕಾರಿಯಾಗಲಿದೆ.
ಇ-ಖಾತಾ ವ್ಯವಸ್ಥೆಯನ್ನು ಒಂದು ಬಾರಿ ಅನುಷ್ಠಾನ ಮಾಡಿದರೆ, ಇಡೀ ದೇಶದಲ್ಲಿ ಅತ್ಯುತ್ತಮ ಮಾದರಿ ಖಾತಾ ವ್ಯವಸ್ಥೆಯನ್ನು ನೀಡಿದಂತಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.