ತುಮಕೂರು ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ, “ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ” ಎಂದರು.
ಮೈಸೂರಿನಲ್ಲೂ ಜಾಗ ಕೊಡ್ತೀವಿ
ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.
ತುಮಕೂರಿನಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಡೇಟಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು.
ಬಳಿಕ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತರಬೇತಿಗೆ ಅಡಿಗಲ್ಲು ಹಾಕಲಾಗಿದೆ. ಕೆಸ್‌ಸಿಎ ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದೆ ಎಂದು ಹೇಳಿದರು.
“ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ನೀಡಲಾಗಿದೆ. ಏಷ್ಯದಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಫುಡ್ ಪಾರ್ಕಿಂಗ್ ಆರಂಭವಾಗಿದ್ದು, ಜಪಾನೀಸ್ ಟೌಪ್‌ಶಿಪ್ ನಿರ್ಮಾಣಕ್ಕೆ 500 ಎಕರೆ ನೀಡಲಾಗಿದೆ” ಎಂದು ತಿಳಿಸಿದರು.
41 ವರ್ಷದಿಂದ ಮಂತ್ರಿ ಆಗಿದ್ದೀನಿ
ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು. “ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೇ” ಉತ್ತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‌ಗೌಡ, ಜ್ಯೋತಿಗಣೇಶ್, ಸುರೇಶ್, ಶ್ರೀನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್.ರಾಜೇಂದ್ರ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್, ಮಾಜಿ ಶಾಸಕ ಗೌರಿಶಂಕರ್, ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಮುಂತಾದವರು ಇದ್ದರು.