ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರರಣೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗುತ್ತಿದ್ದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಸರ್ಕಾರ ಅಮನಾತ್ತು ಮಾಡಿತ್ತು. ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್‌ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ.
ಪ್ರಕರಣದ ತನಿಖೆಯನ್ನು ಇತ್ತ ಎಸ್‌ಐಟಿ ನಡೆಸುತ್ತಿದೆ. ಅತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.
ಸಚಿವರ ರಾಜೀನಾಮೆಗೆ ಆಗ್ರಹ
ಬಿಜೆಪಿ ಸರ್ಕಾರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ರಾಜ್ಯಾಧ್ಯಂತ ಪ್ರತಿಭಟಿಸಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯಲ್ಲೇ ಬಿಜೆಪಿ ನಾಯಕರು ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.