ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.
50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು.
ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಲೀಲಾವತಿ ವೈಯಕ್ತಿಕ ವಿವರ
ಲೀಲಾವತಿ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ, ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದರು.
ಕೃಷಿಯಲ್ಲಿ ಸಕ್ರಿಯರಾಗಿದ್ದ ತಾಯಿ-ಮಗ
ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.
ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.
ಸಿದ್ದರಾಮಯ್ಯ ಸಂತಾಪ
“ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.