ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುರುವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿಯಾದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗುತ್ತಿದ್ದಂತೆ ಅನೇಕ ನಾಯಕರ ಅಸಮಾಧಾನಕ್ಕೆ ವಿಜಯೇಂದ್ರ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೆ ಮುಂದಾಗಿರುವ ವಿಜಯೇಂದ್ರ, ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದಾರೆ.
ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಭೇಟಿ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.
ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿ ವೈ ವಿಜಯೇಂದ್ರ, “”ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಕೆಲವು ಸಂದರ್ಭದಲ್ಲಿ ಅವರು ಅಸಮಾಧಾನವನ್ನೂ ತೋಡಿಕೊಂಡಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಶ್ರಮಿಸೋಣ ಎಂದು ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿರುವೆ” ಎಂದು ಹೇಳಿದರು.
“ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.
“ನಾನೊಬ್ಬ ರಾಜ್ಯಾಧ್ಯಕ್ಷ. ನನ್ನ ಕೆಲಸ ಮಾತನಾಡಬೇಕು. ಕಾರ್ಯಕರ್ತನಾಗಿ, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುವ ಮೂಲಕ, ಸಂಘಟನೆಗೆ ಒತ್ತು ಕೊಡುವೆ. ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಮೂಲಕ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆದ್ದು ಅವರನ್ನು ದೆಹಲಿಗೆ ಕಳಿಸುವ ಮೂಲಕ ನಾನು ಕರ್ತವ್ಯ ನಿರ್ವಹಿಸುತ್ತೇನೆ” ಎಂದು ತಿಳಿಸಿದರು.
“ರಮೇಶ್ ಜಾರಕಿಹೊಳಿ ಜೊತೆ ಸುಮಾರು 30 ನಿಮಿಷ ಮಾತನಾಡಿದ್ದೇನೆ. ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ. ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುತ್ತೇವೆ ಎಂದಿದ್ದಾರೆ” ಎಂದರು.