ವಿಶ್ವಗುರು ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ ಎಂದು ಅರಣ್ಯ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಸಚಿವ ಸಂಪುಟದ ನಿರ್ಧಾರಕ್ಕೆ ಧನ್ಯವಾದ ಅರ್ಪಿಸಿರುವ ಅವರು, ರವಿ ಹಂಜ್ ಅವರು ಬಸವಣ್ಣನವರ ಕುರಿತು ಮಾತನಾಡಿರುವ ಅವಹೇಳನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.
12ನೇ ಶತಮಾನದಲ್ಲಿಯೇ ಶ್ರೇಣಿರಹಿತ, ವರ್ಗರಹಿತ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣನಂತಹ ಮಹಾಪುರುಷರ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳಾದ ಎಂ.ಬಿ. ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಬಸವರಾಜ ರಾಯರೆಡ್ಡಿ, ವಿ.ಮುನಿಯಪ್ಪ ಅವರು ಸಹಮತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯವರು ನಿರ್ಣಯಕ್ಕೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಈಶ್ವರ ಖಂಡ್ರೆ, ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎನ್ನಲಾದ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಬಸವಣ್ಣ ಮತ್ತು ಲಿಂಗಾಯತರ ಬಗ್ಗೆ ಕೀಳಾಗಿ ಮಾತನಾಡಿರುವ ರವಿ ಹಂಜ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದರು.
ಸಚಿವನಾಗಿ ಒಂದು ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬಹಿರಂಗವಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂಬ ಅರಿವು ತಮಗಿದೆ. ಆದರೆ, ಇಡೀ ಲಿಂಗಾಯತ ಸಮುದಾಯ ಹಾಗೂ ಬಸವಣ್ಣನವರ ಅನುಯಾಯಿಗಳಿಗೆ ನೋವುಂಟು ಮಾಡುವ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಮಾಡಿರುವ ಕೃತಿ ಸಮಾಜದ ಸ್ವಾಸ್ಥ್ಯ ಕದಡುವಂತಿದೆ. ಹೀಗಾಗಿ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರನ್ನು ಒತ್ತಾಯಿಸುವುದಾಗಿ ಹೇಳಿದ್ದರು.
ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಗೌರವ ನೀಡುವುದಾಗಿ ತಿಳಿಸಿದ ಅವರು, ಮಹನೀಯರನ್ನು ಅವಮಾನಿಸುವುದು ಹಾಗೂ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಜನರ ಭಾವನೆಗಳನ್ನು ಕೆರಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದರು.
ಲಿಂಗಾಯತರನ್ನು ‘ಲಿಂಗಾಹತರು’ ಎಂದು ಉಲ್ಲೇಖಿಸಿರುವುದು ಪ್ರಚೋದನಕಾರಿ ಹೇಳಿಕೆಯಾಗಿದ್ದು, ವಿಶ್ವದಾದ್ಯಂತ ಇರುವ ಸಮುದಾಯದ ಜನರ ಭಾವನೆಗಳಿಗೆ ನೋವುಂಟು ಮಾಡಿದೆ. ಭಾವನಾತ್ಮಕ ವಿಚಾರಗಳ ಕುರಿತು ಯಾವುದೇ ಸಂಶೋಧನೆ ಇಲ್ಲದೆ ಸ್ವಯಂಘೋಷಿತ ಸಂಶೋಧಕರಂತೆ ಮಾತನಾಡುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.


