Homeಕರ್ನಾಟಕಇಂದಿರಾ ಗಾಂಧಿ ಅವರ ತತ್ವ, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಬಿ.ಕೆ. ಹರಿಪ್ರಸಾದ್

ಇಂದಿರಾ ಗಾಂಧಿ ಅವರ ತತ್ವ, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಬಿ.ಕೆ. ಹರಿಪ್ರಸಾದ್

ಇಂದಿರಾ ಗಾಂಧಿಯವರ ಜನ್ಮದಿನವನ್ನು ಕೇವಲ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸದೆ, ಅವರ ತತ್ವ, ಸಿದ್ಧಾಂತ ಹಾಗೂ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕರೆ ನೀಡಿದರು.

ಚಿಕ್ಕಮಗಳೂರಿನಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 110ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಮಂಜೇಗೌಡ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರು ದೇಶ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ತಮ್ಮದೇ ಛಾಪು ಮೂಡಿಸಿದ ದಿಟ್ಟ ನಾಯಕಿ. ಅಲಿಪ್ತ ರಾಷ್ಟ್ರಗಳ ಚಳವಳಿಯ ಅಧ್ಯಕ್ಷತೆಯನ್ನು ವಹಿಸಿದ್ದ ಅವರ ನಾಯಕತ್ವ ಮತ್ತು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದರು.

ಚಿಕ್ಕಮಗಳೂರಿನೊಂದಿಗೆ ತಮ್ಮ ರಾಜಕೀಯ ಜೀವನದ ನಂಟನ್ನು ಸ್ಮರಿಸಿದ ಅವರು, 1978ರಲ್ಲಿ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನಾಗಿ ಇಂದಿರಾ ಗಾಂಧಿಯವರ ಚುನಾವಣಾ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದೆ. ಅಂದು ಸುಮಾರು 1,500 ಯುವ ಕಾರ್ಯಕರ್ತರು ಒಕ್ಕಲಿಗರ ಸಂಘದ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೆವು. ಈ ಅವಕಾಶವೇ ತಮ್ಮ ರಾಜಕೀಯ ಜೀವನಕ್ಕೆ ಮಹತ್ವದ ತಿರುವು ನೀಡಿತು. ಸುಮಾರು ಐದು ದಶಕಗಳ ಬಳಿಕ ಕೆಪಿಸಿಸಿ ಅಧ್ಯಕ್ಷನಾಗಿ ಇದೇ ನೆಲಕ್ಕೆ ಮರಳಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ನೂತನ ಜಿಲ್ಲಾಧ್ಯಕ್ಷ ಮಂಜೇಗೌಡ ಅವರು ಅಧಿಕಾರದ ಜತೆಗೆ ಜವಾಬ್ದಾರಿಯನ್ನೂ ಸಮರ್ಥವಾಗಿ ನಿಭಾಯಿಸಬೇಕು. ಅಧಿಕಾರವೆಂದರೆ ಸರ್ಕಾರದ ಮೇಲೆ ರಾಜಕೀಯ ಒತ್ತಡ ತಂದು ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು. ಜವಾಬ್ದಾರಿಯೆಂದರೆ ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಅನುಷ್ಠಾನಕ್ಕೆ ತರುವುದು. ಚುನಾವಣೆ ಗೆಲ್ಲುವುದು, ಸಚಿವರಾಗುವುದು ಅಥವಾ ನಿಗಮ ಮಂಡಳಿ ಅಧ್ಯಕ್ಷರಾಗುವುದಷ್ಟೇ ರಾಜಕಾರಣವಾಗಬಾರದು. ಅಧಿಕಾರಕ್ಕಿಂತ ಜವಾಬ್ದಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಿರುವುದು ಅಭಿನಂದನೀಯ. ಆದರೆ ಚುನಾವಣೆಯಲ್ಲಿ ಸೋಲಿಸುವುದಷ್ಟೇ ಸಾಲದು, ಜಿಲ್ಲೆಯಿಂದ ಕೋಮುವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ವಿವಿಧ ಧರ್ಮ, ಸಂಸ್ಕೃತಿ ಮತ್ತು ಪರಂಪರೆಗಳಿಗೆ ಆಶ್ರಯ ನೀಡಿರುವ ಈ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆಗಳಿಗೆ ಅವಕಾಶ ನೀಡಿಲ್ಲ ಎಂದು ಹೇಳಿದರು.

ಇಂದಿರಾ ಗಾಂಧಿಯವರ ರಾಜಕೀಯ ಜೀವನದ ಪ್ರಮುಖ ಘಟನೆಗಳನ್ನು ಉಲ್ಲೇಖಿಸಿದ ಅವರು, ಅಲಹಾಬಾದ್ ಹೈಕೋರ್ಟ್ ತೀರ್ಪು, ಸುಪ್ರೀಂ ಕೋರ್ಟ್‌ನ ಷರತ್ತುಬದ್ಧ ತಡೆಯಾಜ್ಞೆ ಹಾಗೂ ದೇಶದ ಅಂದಿನ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿದರು. ತುರ್ತು ಪರಿಸ್ಥಿತಿ ಘೋಷಣೆಯ ಹಿಂದೆ ದೇಶದ ಏಕತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡುವ ಉದ್ದೇಶವಿತ್ತು ಎಂಬುದು ತಮ್ಮ ಅಭಿಪ್ರಾಯ ಎಂದು ತಿಳಿಸಿದರು.

ಇಂದಿರಾ ಗಾಂಧಿಯವರ ಹಸಿರು ಕ್ರಾಂತಿ, ಬ್ಯಾಂಕ್‌ಗಳ ರಾಷ್ಟ್ರೀಕರಣ ಹಾಗೂ ರಾಜಧನ ರದ್ದತಿ ನಿರ್ಧಾರಗಳು ದೇಶದ ಇತಿಹಾಸದಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾದವು. ಬಡವರು ಮತ್ತು ಸಾಮಾನ್ಯ ಜನರಿಗೆ ಬ್ಯಾಂಕಿಂಗ್ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಲಾಯಿತು. ಆದರೆ ಇಂದಿನ ಕೇಂದ್ರ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ತತ್ವಗಳನ್ನು ರಕ್ಷಿಸುವ ಜವಾಬ್ದಾರಿ ಹೊಂದಿದ್ದಾರೆ. ಜಾತಿ, ಧರ್ಮ, ಭಾಷೆ ಮತ್ತು ಪ್ರಾಂತ್ಯದ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗಬೇಕು. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಬಲಪಡಿಸಬೇಕು ಎಂದು ನೂತನ ಜಿಲ್ಲಾಧ್ಯಕ್ಷರಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ತಮ್ಮ 53 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ದಿನವೂ ಪಕ್ಷವನ್ನು ತೊರೆದಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು. ಒಬ್ಬ ವ್ಯಕ್ತಿ ಇಲ್ಲದಿದ್ದರೂ ಪಕ್ಷಕ್ಕಾಗಿ ದುಡಿಯಲು ನೂರಾರು ಕಾರ್ಯಕರ್ತರು ಸಿದ್ಧರಿರುತ್ತಾರೆ. ಆದ್ದರಿಂದ ವೈಯಕ್ತಿಕ ಅಧಿಕಾರಕ್ಕಿಂತ ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯೇ ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments